ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವ್ಯಂಗ್ಯವಾಡಿದ್ದಾರೆ.
ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣೆಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.
ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಹೇಳಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಆರು ವರ್ಷ ಪೂರೈಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ. ಇಂದಿನ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಲಿದ್ದೇವೆ ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

