ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 2850 ರೂ. ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಭರವಸೆ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಕ್ತಾಯವಾಗಿದೆ. ಕಳೆದ 53 ದಿನಗಳಿಂದ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊಂಡಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರೈತರು ಧರಣಿ ನಡೆಸುತ್ತಿದ್ದರು.
ಫೋನ್ ಮೂಲಕ ಬಾಗಲಕೋಟೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದರು. ರೈತರ ಧರಣಿ ಸ್ಥಳಕ್ಕೆ ಬಂದು ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಡಿಸಿ ಮಹದೇವ ಮುರಗಿ, ಜಮಖಂಡಿ ಉಪ ವಿಭಾಗಾಧಿಕಾರಿ ಸಿದ್ದು ಅವರು ಮಾಹಿತಿ ನೀಡಿದ್ದು, 7 ದಿನಗಳಲ್ಲಿ ರೈತರ ಜೊತೆಗೆ ಸಭೆ ನಡೆಸುವುದಾಗಿಯೂ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭರವಸೆ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಹೋರಾಟ ಕೈಬಿಟ್ಟಿದ್ದಾರೆ.
ಹೋರಾಟ ಅಂತ್ಯಗೊಳಿಸಿ ಕಾರ್ಖಾನೆ ಆರಂಭಕ್ಕೆ ಅವಕಾಶ ಕೊಡುತ್ತೇವೆ. ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ಭರವಸೆಯನ್ನು ಈಡೇರಿಸದಿದ್ದರೆ ಮತ್ತೆ ಹೋರಾಟ ಕೈಗೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.