ನವದೆಹಲಿ: ಮಾರ್ಚ್ 15, 16 ರಂದು ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ ಮುಷ್ಕರಕ್ಕೆ ಕರೆ ನೀಡಿದ್ದು, ಇದರಿಂದಾಗಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ಮಾರ್ಚ್ 13 ಎರಡನೇ ಶನಿವಾರ, ಮಾರ್ಚ್ 14 ಭಾನುವಾರ, ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ ಇರುವ ಕಾರಣ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಭಾರತೀಯ ಬ್ಯಾಂಕುಗಳ ಒಕ್ಕೂಟ ಈ ಬಗ್ಗೆ ಮಾಹಿತಿ ನೀಡಿದೆ ಎಂದು ಕೆನರಾ ಬ್ಯಾಂಕ್ ವತಿಯಿಂದ ಷೇರುಪೇಟೆಗೆ ತಿಳಿಸಲಾಗಿದೆ.
ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದೆ. ಸರ್ಕಾರಿ ಬ್ಯಾಂಕ್ ಗಳ ಖಾಸಗೀಕರಣ ಸೇರಿ ಉದ್ಯಮದ ಮಟ್ಟದಲ್ಲಿನ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದು, ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಸೇವೆಯಲ್ಲಿ ವ್ಯತ್ಯಯವಾಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗಿದ್ದರೂ ಕೂಡ ನೌಕರರು ಉದ್ಯೋಗಿಗಳು ಮುಷ್ಕರದಲ್ಲಿ ಭಾಗವಹಿಸುವ ಕಾರಣ ವ್ಯತ್ಯಯವಾಗಲಿದೆ ಎನ್ನಲಾಗಿದೆ.