ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಎಸ್.ಸಿ./ಎಸ್.ಟಿ. ಮೀಸಲಾತಿ ಹೆಚ್ಚಳ ಮಾಡಿದ್ದು, ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇದರ ಕ್ರೆಡಿಟ್ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪೈಪೋಟಿ ನಡೆಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದ ವೇಳೆ ಮೀಸಲಾತಿ ಹೆಚ್ಚಳಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ನಮ್ಮ ಸರ್ಕಾರ ಮೀಸಲಾತಿ ಹೆಚ್ಚಿಸಿದ ಸಂದರ್ಭದಲ್ಲಿ ಇದು ನಮ್ಮದೇ ಕೊಡುಗೆ ಎಂಬಂತೆ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇನ್ನು ಇದಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಾಗಮೋಹನ್ ದಾಸ್ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಆ ಸಮಿತಿ ನೀಡಿರುವ ವರದಿಯನ್ನು ಈಗಿನ ಸರ್ಕಾರ ಅನುಷ್ಠಾನಗೊಳಿಸಿದೆ ಎಂದು ಹೇಳಿದ್ದಾರೆ.