ಕೇಂದ್ರ ಸರ್ಕಾರ ದೇಶದ 151 ಮಾರ್ಗಗಳಲ್ಲಿ ಸಂಚರಿಸುತ್ತಿರುವ ರೈಲುಗಳನ್ನು ಖಾಸಗೀಕರಣ ಮಾಡುತ್ತಿದ್ದು, ಇದಕ್ಕೆ ಈಗಾಗಲೇ ಪೂರಕ ಪ್ರಕ್ರಿಯೆಗಳು ನಡೆಯುತ್ತಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2023ರ ಮಾರ್ಚ್ ವೇಳೆಗೆ ಖಾಸಗಿ ರೈಲುಗಳ ಸಂಚಾರ ಆರಂಭವಾಗಲಿದೆ.
ಇದರ ಮಧ್ಯೆ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಮತ್ತೊಂದು ಮಹತ್ವದ ಸಂಗತಿಯನ್ನು ಘೋಷಿಸಿದ್ದು, ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸಿ ಅವುಗಳ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹರಾಜು ಮೂಲಕ ಆಧುನೀಕರಣಗೊಂಡ ರೈಲು ನಿಲ್ದಾಣಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಪ್ರಕ್ರಿಯೆಗಳು ಈಗಾಗಲೇ ನಡೆಯಬೇಕಿತ್ತಾದರೂ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ತಡವಾಗಿದೆ ಎನ್ನಲಾಗಿದೆ. ಮೊದಲಿಗೆ ಆಯ್ದ ರೈಲು ನಿಲ್ದಾಣಗಳ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಿದ್ದು, ಬಳಿಕ ಹಂತ ಹಂತವಾಗಿ ಇದನ್ನು ವಿಸ್ತರಿಸಲಾಗುತ್ತದೆ ಎಂದು ಹೇಳಲಾಗಿದೆ.