ತುಮಕೂರು: ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೊಬ್ಬರಿ ಖರೀದಿಗೆ ರಾಜ್ಯ ಸರ್ಕಾರ ಶೀಘ್ರವೇ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ ಕೇಂದ್ರ ಆರಂಭಿಸಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿ, ಬೆಂಬಲ ಬೆಲೆಯೊಂದಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಯೋಜನೆಯಡಿ ಬೆಳೆಗಾರರಿಂದ ಕೊಬ್ಬರಿ ಖರೀದಿಸಲಿದೆ ಎಂದು ಹೇಳಿದ್ದಾರೆ.
ಕೆಲ ವರ್ಷಗಳಿಂದ ಪ್ರತಿ ಕ್ವಿಂಟಲ್ ಕೊಬ್ಬರಿಗೆ 15,000 ರೂ. ಆಸು ಪಾಸಿನಲ್ಲಿ ದರ ಇತ್ತು. ಕಳೆದ ಮೂರು ತಿಂಗಳಿನಿಂದ ದರ ಕುಸಿತ ಕಂಡು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷಗಳಿಂದ ಹಸಿ ಅಂಶ ಉಳಿದುಕೊಂಡು ಬೆಳೆಗಾರರಿಗೆ ನಷ್ಟವಾಗುತ್ತಿದೆ. ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಾಗಿ ಕ್ವಿಂಟಲ್ ಗೆ 11,750 ರೂ. ನಿಗದಿಪಡಿಸಿದ್ದು, ಇದರೊಂದಿಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.