ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ನಂತಹ ಕ್ರಮಗಳಿಂದಾಗಿ ಜನರಲ್ಲಿ ಬೆಲೆ ಏರಿಕೆ ಆತಂಕ ಮೂಡಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಂತೆ ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಹೆಚ್ಚಾಗಿರುವುದರಿಂದ ಜನ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಗತ್ಯ ದಿನಬಳಕೆ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳತೊಡಗಿದ್ದಾರೆ. ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿದೆ.
ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟುವ ಆತಂಕವಿದ್ದು, ಇದನ್ನು ತಡೆಯಲು ರಾಜ್ಯ ಸರ್ಕಾರಗಳು ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ದಿನಸಿ, ತರಕಾರಿ, ಹಣ್ಣು, ಔಷಧ ಪೂರೈಕೆ ವ್ಯತ್ಯಯವಾಗದಂತೆ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಆಹಾರ ಸರಬರಾಜು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.
ಅಗತ್ಯ ವಸ್ತುಗಳ ಕೊರತೆ ಎದುರಾದ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ಗಮನಕ್ಕೆ ತರಲು ಅನುಕೂಲವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದು ಹೇಳಲಾಗಿದೆ.