ನವದೆಹಲಿ: ರೈತರು ಬೆಳೆದ ಉತ್ಪನ್ನಗಳನ್ನು ದೇಶದ ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.
ರೈತರು ಎಪಿಎಂಸಿ ಹೊರತಾಗಿಯೂ ಬೇರೆ ಕಡೆ ಕೃಷಿ ಉತ್ಪನ್ನ ಮಾರಾಟ ಮಾಡಬಹುದು. ರೈತರ ಆದಾಯ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳು ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿದೆ. ಇದರಿಂದ ರೈತರ ಬೆಳೆಗೆ ಉತ್ತಮ ಬೆಲೆ ಸಿಗಲಿದೆ ಎಂದು ಹೇಳಲಾಗಿದೆ.
ಆದರೆ ಆಹಾರ ಪದಾರ್ಥಗಳ ಮೇಲಿನ ನಿಯಂತ್ರಣ ಸರ್ಕಾರಕ್ಕೆ ಇಲ್ಲವಾಗುತ್ತದೆ. ಆಯ್ದ ಕೆಲವು ಪರಿಸ್ಥಿತಿಯಲ್ಲಿ ಮಾತ್ರ ಸರ್ಕಾರ ನಿಯಂತ್ರಣ ಹೊಂದಬಹುದು. ರೈತರು ಖಾಸಗಿಯವರಿಗೆ ಕೃಷಿ ಉತ್ಪನ್ನ ಮಾರಾಟ ಮಾಡುವುದರಿಂದ ವ್ಯಾಪಾರಿಗಳು ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ ಅಗತ್ಯವಸ್ತುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಗತ್ಯವಸ್ತುಗಳ ಪಟ್ಟಿಯಿಂದ ಕೆಲವು ಆಹಾರ ಪದಾರ್ಥಗಳನ್ನು ಕೈಬಿಟ್ಟಿರುವುದರಿಂದ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿ ಬೇಡಿಕೆ ಸೃಷ್ಟಿಸಿ ಬೆಲೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ರೈತರಿಗೆ ಇದರಿಂದ ಅನುಕೂಲವಾಗಿದೆ ಎಂದು ಹೇಳಲಾಗಿದ್ದರೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಬಹುದು ಎಂದು ಹೇಳಲಾಗಿದೆ.
ಯುದ್ಧ, ಬರಗಾಲ, ಪ್ರಕೃತಿ ವಿಕೋಪ, ಬೆಲೆ ಏರಿಕೆ ಸಂದರ್ಭದಲ್ಲಿ ಆಹಾರವಸ್ತುಗಳ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬಹುದು ಎನ್ನಲಾಗಿದ್ದರೂ ಗ್ರಾಹಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.