ಬೆಂಗಳೂರು: ಸರ್ವ ಋತು ಬೆಳೆಯಾಗಿರುವ ಕೊಬ್ಬರಿಯನ್ನು ವರ್ಷಪೂರ್ತಿ ಬೆಂಬಲ ಬೆಲೆ ನೀಡಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಕೆ. ಎನ್. ರಾಜಣ್ಣ, ಹೆಚ್.ಕೆ. ಪಾಟೀಲ್, ಶಿವಾನಂದ ಪಾಟೀಲ್ ಅವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಬೆಳೆಗಳ ಬೆಲೆ ಸ್ಥಿರೀಕರಣ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ನಿಗದಿತ 54,750 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಸಂಪೂರ್ಣ ಗುರಿ ಸಾಧಿಸಬೇಕು. ವರ್ಷವಿಡೀ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.