ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕೆಂದು ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಜಿಎಸ್ಟಿ ಕೌನ್ಸಿಲ್ ಗೆ ಒತ್ತಾಯಿಸಿದ್ದಾರೆ.
ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಅಬಕಾರಿ ಸುಂಕ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ಮೌಲ್ಯವರ್ಧಿತ ತೆರಿಗೆ(ವ್ಯಾಟ್) ನಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತಂದರೆ ಬೆಲೆ ದೇಶಾದ್ಯಂತ ಏಕರೂಪದಲ್ಲಿ ಇರಲಿದೆ. ತೆರಿಗೆಯೂ ಒಂದೇ ರೀತಿ ಇರುವುದರಿಂದ ಬೆಲೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.
ವಿಶೇಷ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿದ್ದೇನೆ. ಈ ಬಗ್ಗೆ ನಿರಂತರವಾಗಿ ಒತ್ತಾಯಿಸಿದ್ದು, ಬೇಡಿಕೆಯನ್ನು ಪರಿಗಣಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಧರ್ಮೇಂದ್ರ ಪ್ರಧಾನ್ ಅವರಿಂದ ಜಿಎಸ್ಟಿ ಕೌನ್ಸಿಲ್ ಮೇಲೆ ಒತ್ತಡ ಹೆಚ್ಚಾಗಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದರೆ, ಜನಸಾಮಾನ್ಯರಿಗೆ ದೊಡ್ಡ ಪರಿಹಾರ ಸಿಗಲಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದು, ತೈಲ ಮತ್ತು ಅನಿಲ ಕ್ಷೇತ್ರದ ಬೆಳವಣಿಗೆಗೆ ಇದರಿಂದ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.