ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶಿಸಿದೆ. ಯುನಿಟ್ ಗೆ 1.01 ರೂಪಾಯಿ ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ದರ ಏರಿಕೆ ಶಾಕ್ ನೀಡಿದೆ.
ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕದ ಹೆಸರಲ್ಲಿ ಪ್ರತಿ ಯೂನಿಟ್ ಗೆ 1.01 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಕ್ಟೋಬರ್ ತಿಂಗಳಿಗೂ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಏರಿಕೆ ಮುಂದುವರಿಸಲಾಗಿದೆ.
ಕಳೆದ ಜೂನ್ ತಿಂಗಳಲ್ಲಿ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಅನ್ವಯವಾಗುವಂತೆ ಪ್ರತಿ ಯೂನಿಟ್ ಗೆ 50 ಪೈಸೆ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಅಕ್ಟೋಬರ್ ತಿಂಗಳಿಗೆ ಸೀಮಿತವಾಗಿ ಮತ್ತೆ 51 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಯೂನಿಟ್ ಗೆ 1.01 ರೂ. ಹೆಚ್ಚುವರಿ ಶುಲ್ಕ ಪಾವತಿಸಬೇಕು.
ಗೃಹಜ್ಯೋತಿ ಯೋಜನೆ ಫಲಾನುಭವಿ ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯವಿದ್ದು, ಯೋಜನೆಯ ಫಲಾನುಭವಿಗಳಲ್ಲದ ಬಳಕೆದಾರರು, ವಾಣಿಜ್ಯ ಬಳಕೆದಾರರು ಹೆಚ್ಚುವರಿ ಶುಲ್ಕ ಪಾವತಿಸಬೇಕಿದೆ.