ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು ಇಳಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಹೇಳಿದ್ದಾರೆ.
ದೇಶದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ, ಮದುವೆ, ಕುಟುಂಬದ ಆರೋಗ್ಯ ಮೊದಲಾದವುಗಳಿಗೆ ಹೆಚ್ಚಿನ ಖರ್ಚು ಆಗಲಿದ್ದು, ಆದಾಯಕ್ಕಿಂತ ವೆಚ್ಚವೇ ಜಾಸ್ತಿಯಾಗುತ್ತಿದೆ. ಇದರೊಂದಿಗೆ ಪ್ರಾಕೃತಿಕ ವಿಕೋಪ ನಷ್ಟದಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ನಿಟ್ಟಿನಲ್ಲಿ ರೈತರ ಸಾಲದ ಹೊತೆ ಇಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ, ದಾಸ್ತಾನು, ಬ್ರಾಂಡಿಂಗ್, ಸೂಕ್ತ ಮಾರುಕಟ್ಟೆ ಸೌಲಭ್ಯ ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ಮೂಲಸೌಕರ್ಯ ಒದಗಿಸುವ ಅಗತ್ಯವಿದೆ. ಸಬ್ಸಿಡಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ರೈತರ ಆದಾಯ ದ್ವಿಗುಣಗೊಳಿಸಲು ಹೊಸ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ದೇಶಕ್ಕೇ ಮಾದರಿಯಾದ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಯೋಜನೆಯನ್ನು ಎಲ್ಲ ರಾಜ್ಯಗಳು ಅನುಸರಿಸಲು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇನ್ನು ಮುಂದೆ ಕೃಷಿ ಸಾಲಕ್ಕಾಗಿ ರೈತರು ಬ್ಯಾಂಕಿಗೆ ಹೋಗುವ ಅಗತ್ಯವಿಲ್ಲ. ಬ್ಯಾಂಕುಗಳೇ ರೈತರ ಹೊಲಕ್ಕೆ ಹೋಗಿ ಸಾಲ ನೀಡುವ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.