![](https://kannadadunia.com/wp-content/uploads/2018/11/09_39_237542610petrol-price-delhi-ll.jpg)
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಮಂತ್ರಾಲಯ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಚಿಂತನೆ ನಡೆಸಿದೆ.
ಕಳೆದ ಹತ್ತು ತಿಂಗಳ ಅವಧಿಯಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿ ದೇಶದಲ್ಲಿ ಇಂಧನ ಬೆಲೆ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮೂಲ ದರಕ್ಕಿಂತ ಶೇ 60 ರಷ್ಟು ತೆರಿಗೆಯನ್ನೇ ಒಳಗೊಂಡಿದೆ. ಭಾರತ ವಿಶ್ವದ ಮೂರನೇ ಅತಿ ದೊಡ್ಡ ಕಚ್ಚಾತೈಲ ಗ್ರಾಹಕ ದೇಶವಾಗಿದೆ.
ಕೊರೋನಾ ಸಾಂಕ್ರಮಿಕ ರೋಗದ ಕಾರಣದಿಂದ ಆರ್ಥಿಕ ಸಂಕಷ್ಟ ಎದುರಾದ ನಂತರದಲ್ಲಿ ಕುಸಿಯುವ ತೆರಿಗೆ ಆದಾಯ ಹೆಚ್ಚಿಸಲು ಕಳೆದ 12 ತಿಂಗಳಲ್ಲಿ ಎರಡು ಸಲ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಜಾಸ್ತಿ ಮಾಡಲಾಗಿದೆ.
ಹಣಕಾಸು ಸಚಿವಾಲಯದಿಂದ ಕೆಲವು ರಾಜ್ಯಗಳು ಮತ್ತು ತೈಲ ಕಂಪನಿಗಳ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಬೆಲೆಗಳನ್ನು ಸ್ಥಿರವಾಗಿರಿಸಲು ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದು, ಮಾರ್ಚ್ ಮಧ್ಯದ ವೇಳೆಗೆ ಸಮಸ್ಯೆಯನ್ನು ನಿವಾರಿಸಲು ಕ್ರಮಕೈಗೊಳ್ಳಲಾಗುತ್ತಿದೆ.
ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾಲೋಚನೆಯೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಣಕಾಸು ಸಚಿವಾಲಯ ಮತ್ತು ಪೆಟ್ರೋಲಿಯಂ ಸಚಿವಾಲಯ ಈ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಿವೆ. ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಅಬಕಾರಿ ಸುಂಕವನ್ನು ಕಡಿಮೆಮಾಡಲು ಚರ್ಚೆ ನಡೆದಿದೆ.
ಮಾರ್ಚ್, ಏಪ್ರಿಲ್ ನಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.