ಬೆಂಗಳೂರು: ಖಾಸಗಿ ಸಾಲ ಸಂತ್ರಸ್ತ ರೈತರಿಗೂ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. ಪರವಾನಿಗೆ ಪಡೆದ ಖಾಸಗಿ ಲೇವಾದೇವಿಗಾರರಿಂದ ರೈತರು ಪಡೆದುಕೊಂಡ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಹೈಕೋರ್ಟ್ ನಿರ್ದೇಶನದಂತೆ ನಿರ್ಧಾರ ಕೈಗೊಂಡಿದ್ದು, ಜುಲೈ 8 ರಂದು ಆದೇಶ ಹೊರಡಿಸಲಾಗಿದೆ. ಲೈಸನ್ಸ್ ಹೊಂದಿದ ಲೇವಾದೇವಿಗಾರರಿಂದ ಸಾಲ ಪಡೆದಿದ್ದರೆ ಮಾತ್ರ ಅನ್ವಯವಾಗಲಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸದ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ. ಈ ವೇಳೆ ಸರ್ಕಾರದ ಪರ ವಕೀಲ ವಿಜಯಕುಮಾರ ಪಾಟೀಲ ಅವರು, ಸಹಕಾರಿ ಬ್ಯಾಂಕುಗಳಿಂದ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳಿಂದ ಪಡೆದ ಸಾಲ ತೀರಿಸದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು. ಅದೇ ರೀತಿ ಖಾಸಗಿ, ಲೇವಾದೇವಿಗಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೂ ಪರಿಹಾರ ನೀಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.