ನವದೆಹಲಿ: ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಮಸೂದೆ ಮಂಡನೆಗೆ ಸಿದ್ಧತೆ ಕೈಗೊಂಡಿದೆ. ನವೆಂಬರ್ 29 ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಅಧಿವೇಶನದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.75 ಲಕ್ಷ ಕೋಟಿ ರೂಪಾಯಿ ಬಂಡವಾಳ ಹಿಂತೆಗೆದುಕೊಳ್ಳುವ ಭಾಗವಾಗಿ ಬ್ಯಾಂಕ್ ಗಳ ಖಾಸಗೀಕರಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ಬ್ಯಾಂಕ್ ಗಳ ತಿದ್ದುಪಡಿ ಮಸೂದೆ ಸೇರಿದಂತೆ 26 ಮಸೂದೆಗಳನ್ನು ಮಂಡಿಸಲಾಗುವುದು. ಆದರೆ, ಪ್ರಸ್ತಾಪಿತ ಮಸೂದೆಯಲ್ಲಿ ಯಾವೆಲ್ಲ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲಾಗುವುದು ಎಂಬ ಮಾಹಿತಿ ಉಲ್ಲೇಖಿಸುವ ಸಾಧ್ಯತೆ ಇಲ್ಲವೆಂದು ಹೇಳಲಾಗಿದೆ.