ಬೆಂಗಳೂರು: ಸಹಕಾರ ಸಂಘಗಳಲ್ಲಿಯೂ ಜನೌಷಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮುಂದಾಗಿದೆ.
500 ಮಳಿಗೆಗಳನ್ನು ಆರಂಭಿಸಲು ಮಹಾಮಂಡಳ ತೀರ್ಮಾನಿಸಿದ್ದು, ರಾಜ್ಯದ ಗ್ರಾಮೀಣ ಜನರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಸಹಕಾರ ಸಂಘಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ.
ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳಿದ್ದು ಆರಂಭಿಕ ಹಂತದಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ 500 ಮಳಿಗೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಆರಂಭಿಸಲಾಗುವುದು. ಹುಬ್ಬಳ್ಳಿಯಲ್ಲಿ ಜನೌಷಧಿ ಕೇಂದ್ರವನ್ನು ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ನಾಳೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.