ಬೆಂಗಳೂರು: ಹೈನುಗಾರರು ಮತ್ತು ಹಾಲು ಉತ್ಪಾದಕ ಒಕ್ಕೂಟಗಳ ಹಿತ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಎಷ್ಟು ಏರಿಕೆ ಮಾಡಬೇಕೆಂಬುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರೈತರಿಗೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿ ಲೀಟರ್ ಗೆ ನೀಡುತ್ತಿರುವ ದರಕ್ಕಿಂತ ಖಾಸಗಿ ವ್ಯಕ್ತಿಗಳು ಒಂದರಿಂದ ಎರಡು ರೂಪಾಯಿ ಹೆಚ್ಚಿನ ದರ ನೀಡುತ್ತಿದ್ದಾರೆ. ಪಶು ಆಹಾರ ದರ ಹೆಚ್ಚಳವಾಗಿದೆ. ಹೀಗಾಗಿ, ರೈತರು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದು, ಹಾಲಿನ ದರ ಹೆಚ್ಚಳ ಮಾಡಲು ಸಿಎಂ ಜೊತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆಯಬೇಕಿದ್ದ. ಸಭೆಯನ್ನು ಜುಲೈ 14ಕ್ಕೆ ಮುಂದೂಡಲಾಗಿದೆ. ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಪ್ರತಿ ಲೀಟರ್ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವ ಕುರಿತಂತೆ ಸಿಎಂ ಜೊತೆ ಚರ್ಚೆ ನಡೆಸಲು ತೀರ್ಮಾನಿಸಲಾಗಿತ್ತು.