ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತಂತೆ ಮುಂದಿನ ವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಈ ಮೂಲಕ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ರೈತ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರುವೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ.
ಸರ್ಕಾರಕ್ಕೆ ಎಷ್ಟು ಆರ್ಥಿಕ ಹೊರೆ ಬೀಳಲಿದೆ ಎಂಬುದನ್ನು ತಿಳಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಳೆ ನಷ್ಟದ ವರದಿ ನೀಡಬೇಕೆಂದು ಕೃಷಿ ಇಲಾಖೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಸಭೆ ನಡೆಸಿ ಕಬ್ಬು, ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.