ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ( MSP)ಯಡಿ ಭತ್ತ ಖರೀದಿಗೆ ರಾಜ್ಯ ಸಚಿವ ಸಂಪುಟ ಉಪ ಸಮಿತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ ಉಪ ಸಮಿತಿಯ ಸಭೆಯಲ್ಲಿ 2020 -21 ನೇ ಸಾಲಿನಲ್ಲಿ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿ ಮಾಡಲು ನಿರ್ಧರಿಸಲಾಗಿದೆ.
ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೆಚ್ಚುವರಿಯಾಗಿ ಭತ್ತ ಖರೀದಿಗೆ ಅವಕಾಶ ಕೊಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಮುಂದಿನ ತಿಂಗಳಿನಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಹೇಳಲಾಗಿದೆ.
ಭತ್ತ ಖರೀದಿಗೆ ರಾಜ್ಯದ ಆವರ್ತ ನಿಧಿಯಿಂದ ಹಣ ಒದಗಿಸಲಾಗುವುದು. ಇದಕ್ಕಾಗಿ 300 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೇಡಿಕೆಗೆ ಅನುಗುಣವಾಗಿ ಭತ್ತ ಸಂಗ್ರಹಣೆ ಏಜೆನ್ಸಿಗಳಿಗೆ ಅನುದಾನ ಬಿಡುಗಡೆ ಮಾಡಲು ಸಭೆ ನಿರ್ಧರಿಸಿದೆ.
ಶೇಂಗಾ ಖರೀದಿಗೂ ಕೇಂದ್ರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರವೇ ಶೇಂಗಾ ಖರೀದಿ ಪ್ರಕ್ರಿಯೆ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರಕ್ಕೆ ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು. 79,175 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿರುವುದರಿಂದ ಶೀಘ್ರವೇ ಖರೀದಿ ಆರಂಭಿಸಲಾಗುತ್ತದೆ ಎಂದು ಹೇಳಲಾಗಿದೆ.