ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಏರಿಕೆಯಿಂದ ಜನ ಕಂಗಾಲಾಗಿ ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಅವರು ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಬೆಲೆ ಇಳಿಕೆ ಮಾಡುವುದೇ ಇದಕ್ಕೆ ಪರಿಹಾರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ತಂದರೆ ಒಂದೇ ತೆರಿಗೆ ದರ ಅನ್ವಯವಾಗುತ್ತದೆ. ಇದರಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಆಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜಿಎಸ್ಟಿ ಮಂಡಳಿ ಸಮಾಲೋಚನೆ ನಡೆಸಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಿಸುತ್ತವೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಪೆಟ್ರೋಲ್, ಡೀಸೆಲ್ ಅಡುಗೆ ಅನಿಲವನ್ನು ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.