ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರುವ ಕುರಿತು ಜಿಎಸ್ಟಿ ಮಂಡಳಿ ಸಭೆಯಲ್ಲಿ ಪರಿಶೀಲನೆ ನಡೆಸಲಾಗುವುದು. ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್ಟಿ ಮಂಡಳಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಇತರೆ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು.
ಈ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದಾಯದ ವಿಚಾರದಲ್ಲಿ ಹೊಂದಾಣಿಕೆ ಅಗತ್ಯವಾಗಿದೆ. ಭಾರೀ ಬೆಲೆ ಏರಿಕೆಯ ಸಂದರ್ಭದಲ್ಲಿ ಇವುಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕೆಂಬ ಬೇಡಿಕೆ ಹೆಚ್ಚಾಗಿದೆ. ಅಲ್ಲದೇ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ಟಿಗೆ ವ್ಯಾಪ್ತಿಗೆ ತರಲು ಕ್ರಮಕೈಗೊಳ್ಳಬೇಕೆಂದು ಕೇರಳ ಹೈಕೋರ್ಟ್ ಸೂಚನೆ ನೀಡಿತ್ತು. ಇವೆಲ್ಲವುಗಳ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.