ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಸರ್ಕಾರ ಮುಂದಾಗಿದೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಥಗಿತಗೊಂಡಿರುವ ರಾಗಿ ಖರೀದಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಚಿಂತನೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಸರ್ಕಾರ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರಾಗಿ ಖರೀದಿಗೆ ಮಿತಿ ಹೇರಿದ ಕಾರಣ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಿದ್ದು, ರೈತರಿಗೆ ತೊಂದರೆ ಉಂಟಾಗಿದೆ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.