ಮಡಿಕೇರಿ: ಸರ್ಕಾರ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿಗೆ ಮುಂದಾಗಿದ್ದು, ಡಿಸೆಂಬರ್ 15 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಆಗಿ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ, ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.
ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತದೆ. ಸರ್ಕಾರ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3578 ರೂ ನಿಗದಿಪಡಿಸಿದೆ ಎಂದು ತಿಳಿಸಿದರು.
ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ, ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು, ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.
ಕನಿಷ್ಠ ಬೆಂಬಲ ಬೆಲೆಯಡಿ ಭತ್ತ ಹಾಗೂ ರಾಗಿ ಸಂಬಂಧ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗಳಲ್ಲಿ ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ದೂರುಗಳು ಬರದಂತೆ ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾತನಾಡಿ, ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ತಿಳಿಸಿದರು.