ನವದೆಹಲಿ: ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಲು ಸಿದ್ದತೆ ನಡೆದಿದೆ ಎಂದು ಭಾರತೀಯ ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಹೇಳಿದ್ದಾರೆ.
ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಯಾದವ್ ಹೇಳಿದ್ದಾರೆ. ಕೊರೊನಾ ಕಡಿಮೆಯಾದ ನಂತರ ಟಿಕೆಟ್ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಕಾರಣದಿಂದ ರೈಲು ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸಲು ಪ್ಲಾಟ್ ಫಾರ್ಮ್ ಟಿಕೆಟ್ ಶುಲ್ಕ ಹೆಚ್ಚಳ ಮಾಡಲು ಸ್ಥಳೀಯವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜನ ಅನಗತ್ಯವಾಗಿ ಪ್ಲಾಟ್ ಫಾರ್ಮ್ ಗೆ ಬರುವುದನ್ನು ತಡೆಯಲು ಸಾಮಾಜಿಕ ಅಂತರ ಅನುಸರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಮಹಾರಾಷ್ಟ್ರದ ಪುಣೆ ಜಂಕ್ಷನ್ ನಲ್ಲಿ ಪ್ಲಾಟ್ ಫಾರ್ಮ್ ಶುಲ್ಕ 50 ರೂ.ಗೆ ಹೆಚ್ಚಳ ಮಾಡಿದ್ದು, ಭಾರೀ ಹೊರೆಯಾಗಿದೆ ಎಂದು ದೂರಲಾಗಿದೆ.