ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ವಾಣಿಜ್ಯ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ.
ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಸೇವಾ ಶುಲ್ಕ ವಿಧಿಸುವಂತಿಲ್ಲ. ಗ್ರಾಹಕರು ಸೇವೆಯಿಂದ ತೃಪ್ತರಾಗಿದ್ದಲ್ಲಿ ಸ್ವಯಂಪ್ರೇರಣೆಯಿಂದ ಟಿಪ್ಸ್ ನೀಡಬಹುದು. ರೆಸ್ಟೋರೆಂಟ್ ಮಾಲೀಕರು ತಮ್ಮ ಸಿಬ್ಬಂದಿಗೆ ಹೆಚ್ಚಿನ ವೇತನ ಇತರ ಸೌಲಭ್ಯ ನೀಡಲು ಬಯಸಿದ್ದಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸುವ ಉದ್ದೇಶದಿಂದ ಮೆನುವಿನಲ್ಲಿರುವ ತಿನಿಸುಗಳ ದರ ಹೆಚ್ಚಳ ಮಾಡಬಹುದು. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಸೇವಾ ಶುಲ್ಕದ ಹೆಸರಿನಲ್ಲಿ ಗ್ರಾಹಕರ ಹೊರೆ ಹಾಕುವಂತಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ಅಡುಗೆ ಅನಿಲ ಸಿಲಿಂಡರ್, ಆಹಾರಧಾನ್ಯಗಳ ಬೆಲೆ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್ ಮಾಲೀಕರು ತಿಂಡಿ-ತಿನಿಸುಗಳ ದರ ಹೆಚ್ಚಳ ಮಾಡಿದ್ದಾರೆ. ಇದರೊಂದಿಗೆ ಸೇವಾಶುಲ್ಕ ವಿಧಿಸುತ್ತಿದ್ದು, ಗ್ರಾಹಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಪದಾಧಿಕಾರಿಗಳೊಂದಿಗೆ ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಸಭೆ ನಡೆಸಿದ್ದು, ಸೇವಾ ಶುಲ್ಕ ವಿಧಿಸುವ ರೆಸ್ಟೋರೆಂಟ್ ಮಾಲೀಕರ ವಾದವನ್ನು ತಳ್ಳಿಹಾಕಿದ್ದಾರೆ. ನಿಯಮಗಳ ಪ್ರಕಾರ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗ್ರಾಹಕರಿಗೆ ಸೇವಾ ಶುಲ್ಕ ಪಾವತಿಸಲು ಒತ್ತಾಯಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ.