ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಆಧಾರ್ ನೋಂದಣಿ ತಿದ್ದುಪಡಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಕೈಗೊಳ್ಳಲಾಗಿದೆ.
ಗ್ರಾಮಾಂತರ ಪ್ರದೇಶದ ಜನರು ಆಧಾರ್ ಕಾರ್ಡ್ ನೋಂದಣಿಗೆ ಪರದಾಟ ನಡೆಸುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳು ಇಲ್ಲದ ಕಾರಣ ಜನರಿಗೆ ತೊಂದರೆಯಾಗಿದೆ. ಕೊರೊನಾ ಲಸಿಕೆ ಪಡೆಯಲು ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆಯಾಗಬೇಕಿದೆ. ಇದಲ್ಲದೆ, ಅನೇಕ ಸೇವೆಗಳಿಗೆ ಆಧಾರ್ ಸಂಖ್ಯೆ ಕಡ್ಡಾಯವಾಗಿದ್ದು, ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.
ಪ್ರತಿ ಸೇವೆಗೆ 50 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಶುಲ್ಕ ಇರುವುದಿಲ್ಲ. ಮೊದಲ ಹಂತದಲ್ಲಿ 630 ಗ್ರಾಮಪಂಚಾಯಿತಿಗಳಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಲಾಗಿದೆ.