ಬೆಂಗಳೂರು: ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಪ್ಯಾಕ್ಸ್ ಗಳಲ್ಲಿ ಸಾಲ ಪಡೆದುಕೊಂಡು ಕೊರೋನಾದಿಂದ ಮೃತಪಟ್ಟಿರುವ 10,187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ಸಾಲ ಮನ್ನಾ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ರೈತರ ನೆರವಿಗೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ಧವಾಗಿದ್ದು ಈ ನಿಟ್ಟಿನಲ್ಲಿ ಕೊರೋನಾದಿಂದ ಮೃತಪಟ್ಟ 10,000ಕ್ಕೂ ಅಧಿಕ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ. 2020 -21 ನೇ ಸಾಲಿನಲ್ಲಿ 25.67 ಲಕ್ಷ ರೈತರಿಗೆ 17,108 ಕೋಟಿ ರೂಪಾಯಿ ಸಾಲ ನೀಡುವ ಮೂಲಕ ಗುರಿ ಮೀರಿದ ಸಾಧನೆ ಮಾಡಲಾಗಿದೆ. ಇವರಲ್ಲಿ 10,187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡುವ ಚಿಂತನೆ ಇದೆ ಎಂದು ಮಾಹಿತಿ ನೀಡಿದ್ದಾರೆ.