ಬೆಂಗಳೂರು: ರಾಜ್ಯದ ಜನತೆಗೆ ಹೊಸ ವರ್ಷದ ಕೊಡುಗೆಯಾಗಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮತದಾರರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ವಿದ್ಯುತ್ ದರ ಕಡಿತಗೊಳಿಸುವ ಮೂಲಕ ಜನತೆಗೆ ಸಿಹಿಸುದ್ದಿ ನೀಡಿದೆ. ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಕಡಿತ ಮಾಡಲಾಗಿದೆ.
ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಹಾಗೂ ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಕಡಿತ ಮಾಡಲಾಗಿದ್ದು, ಗ್ರಾಹಕರಿಗೆ ಇದರ ಪ್ರಯೋಜನ ನೇರವಾಗಿ ಲಭಿಸಲಿದೆ ಎಂದು ಹೇಳಿದ್ದಾರೆ.