ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿಯ ಆಡಳಿತ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರ ಕೈ ಬಿಟ್ಟಿರುವುದಾಗಿ ಪಿಯು ಕಾಲೇಜು ಉಪನ್ಯಾಸಕರ ಸಂಘ ತಿಳಿಸಿದೆ.
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಸದನದಲ್ಲಿ ಡಿಡಿಪಿಯು ಗಳ ಕಚೇರಿ ಆಡಳಿತ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸುವ ಪ್ರಸ್ತಾವನೆ ಇಲ್ಲವೆಂದು ತಿಳಿಸಿದ್ದಾರೆ. ಇದರಿಂದ ಉಪನ್ಯಾಸಕರಲ್ಲಿದ್ದ ಗೊಂದಲ ಬಗೆಹರಿದಿದೆ. ಇಲಾಖೆಯ ಸ್ವಾಯತ್ತೆ ಉಳಿವಿಗೆ ನೆರವಾಗುತ್ತದೆ. ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಬಹಿಷ್ಕಾರದ ಚಿಂತನೆ ಬಿಟ್ಟು ಸರ್ಕಾರ ನಿಗದಿಪಡಿಸಿದ ವೇಳಾಪಟ್ಟಿಯಂತೆ ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಸಂಘದ ಎಲ್ಲಾ ಜಿಲ್ಲಾ ಪದಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ತಿಳಿಸಿದ್ದಾರೆ.

