ಹುಬ್ಬಳ್ಳಿ: ಮಹಾತ್ಮ ಗಾಂಧಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಸತ್ಯವಾಗಿದ್ದರೆ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಗಾ ಕಾಯ್ದೆ ರದ್ದುಪಡಿಸಿ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಕಾಯ್ದೆ ಜಾರಿ ಮೂಲಕ ಬಿಜೆಪಿಯವರು ಗಾಂಧಿಯನ್ನು ಎರಡು ಬಾರಿ ಕೊಂದಿದ್ದಾರೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ. ಇಂತಹದೇ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನ್ಯಾಯಾಲಯದಲ್ಲಿ ಕ್ಷಮೆ ಕೇಳಿದ್ದಾರೆ. ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಬಾರದು ಎಂದರೆ ಎಚ್ಚರಿಕೆಯಿಂದ ಇತಿಮಿತಿ ನೋಡಿಕೊಂಡು ಮಾತನಾಡಬೇಕು ಎಂದು ಹೇಳಿದ್ದಾರೆ.

