ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಶಿವರಾತ್ರಿ ಜಾತ್ರೆ ಮುಕ್ತಾಯದ ಬೆನ್ನಲ್ಲೇ ಚಿರತೆ ಕಾಣಿಸಿಕೊಂಡಿರುವುದು ಪಾದಯಾತ್ರಿಗಳ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿಸಿದ್ದು, ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ಸವಾರರು ಚಿರತೆಯನ್ನು ಕಂಡು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆರಾತ್ರಿ ವೇಳೆಯಲ್ಲಿ ಈ ಮಾರ್ಗದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸದಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.
ಈಗಾಗಲೇ ಅರಣ್ಯ ಇಲಾಖೆಯು ಚಿರತೆಯನ್ನು ಸೆರೆಹಿಡಿಯಲು ಬೋನುಗಳನ್ನು ಅಳವಡಿಸಿದೆ. ಜಾತ್ರೆ ಮುಕ್ತಾಯವಾಗಿರುವುದರಿಂದ, ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಬರುವ ಭಕ್ತರ ರಕ್ಷಣೆ ಹಾಗೂ ಅವರಿಗೆ ಜಾಗೃತಿ ಮೂಡಿಸುವುದು ಈಗ ಆದ್ಯತೆಯಾಗಿದೆ ಎಂದು ವರದಿಯಾಗಿದೆ.

