ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ಕಳೆದ 13 ವರ್ಷದ ಇತಿಹಾಸದಲ್ಲೇ ಈ ತಿಂಗಳೊಂದರಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ದಾಖಲೆಯಾಗಿದೆ.
ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿದಂತೆ 68.17 ಲಕ್ಷ ಬಾಕ್ಸ್ ದಾಖಲೆಯ ಐಎಂಎಲ್ ಮದ್ಯ ಮಾರಾಟವಾಗಿದೆ. 50.39 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಒಟ್ಟಾರೆ 118.56 ಲಕ್ಷ ಬಾಕ್ಸ್ ಮದ್ಯ ಮಾರಾಟವಾಗಿದೆ.
2025ರ ಏಪ್ರಿಲ್ ನಲ್ಲಿ 57.44 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದ್ದು, ಪ್ರಸಕ್ತ ಏಪ್ರಿಲ್ ನಲ್ಲಿ 68.17 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದೆ. 2025ರ ಏಪ್ರಿಲ್ ನಲ್ಲಿ 41.60 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಪ್ರಸಕ್ತ ಏಪ್ರಿಲ್ ನಲ್ಲಿ 50.39 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. 3688 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ.
ಕರ್ನಾಟಕದ ಗಡಿಗೆ ಹೊಂದಿಕೊಂಡ ತಮಿಳುನಾಡು, ಕೇರಳ ವಿಧಾನಸಭೆಗೆ ಏಪ್ರಿಲ್ ನಲ್ಲಿ ಚುನಾವಣೆ ನಡೆದಿದ್ದು, ಮದ್ಯ ಮಾರಾಟ ನಿಷೇಧಿಸಿದ್ದರಿಂದ ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇದು ಕೂಡ ಮದ್ಯ ಮಾರಾಟ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ.

