ದಾವಣಗೆರೆ: ಒಮಿಕ್ರಾನ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ವಿಭಿನ್ನ ಮಾದರಿಯ ಸೋಂಕು ಪತ್ತೆಯಾಗಿದೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದಿಂದ ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಮಿಕ್ರಾನ್ ಬಗ್ಗೆ ಗಾಬರಿ ಪಡಬೇಕಿಲ್ಲ. ವಿದೇಶಗಳಿಂದ ಬಂದವರನ್ನು ಪರೀಕ್ಷೆ ಮಾಡಲಾಗುತ್ತಿದೆ. ಕೇರಳದಿಂದ ಬಂದ ಪ್ರತಿಯೊಬ್ಬರಿಗೂ ಟೆಸ್ಟ್ ಮಾಡಲಾಗುತ್ತಿದೆ ಎಂದರು.
ಶಾಲಾ-ಕಾಲೇಜುಗಳಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬಂದ ವಿದ್ಯಾರ್ಥಿಗಳನ್ನು ಕಡ್ಡಾಯ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಲಾಕ್ ಡೌನ್ ಪ್ರಶ್ನೆಯೇ ಉದ್ಭವಿಸಲ್ಲ. ಜನರು ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ವಹಿಸಿ, ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.