ಕಡಲತೀರದ ಭಾರ್ಗವ, ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ಕೋಟಾ ಶಿವರಾಮ ಕಾರಂತ ಅವರು ಕನ್ನಡಕ್ಕೆ ಕೊಟ್ಟ ಕೊಡುಗೆ ಅಪಾರ. ಕನ್ನಡ ಸಾಹಿತ್ಯ, ಸಂಸ್ಕೃತಿಯ ವಕ್ತಾರ ಎಂದೇ ಇವರನ್ನು ಕರೆಯುತ್ತಿದ್ದರು. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವಂತೆ. ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ ಹೀಗೆ ಒಂದೇ ಎರಡೇ ಇವರ ಕೊಡುಗೆ.
ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ. 1902ರ ಅಕ್ಟೋಬರ್ 10ರಂದು ಇವರ ಜನನ ಆಯ್ತು. ಸುಮಾರು 427 ಪುಸ್ತಕಗಳನ್ನು ರಚಿಸಿದ್ದಾರೆ. ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿದೆ. ಸಾಹಿತಿಯಾಗಿ ಅಷ್ಟೆ ಅಲ್ಲದೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದ್ದಾರೆ. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿದವರು ಇವರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು. ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು.
ಇನ್ನು ಚಿತ್ರರಂಗದಲ್ಲೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮೂಕಿ ಚಿತ್ರ ನಿರ್ಮಾಣ ಮಾಡಿದ ಇವರು, ಹರಿಜನರ ಬದುಕನ್ನು ಆಧರಿಸಿದ್ದ ಡೊಮಿಂಗೋ ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ಅನಂತರ ಭೂತರಾಜ್ಯ ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ಮಿಸಿದರು. ಇವರಿಗೆ ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಸೇರಿ ಹಲವು ಪುರಸ್ಕಾರ ತಮ್ಮದಾಗಿಸಿಕೊಂಡಿದ್ದಾರೆ.
ಇವರ ಮತ್ತೊಂದು ವಿಚಾರ ಅಂದರೆ ನಾನು ದೇವರನ್ನು ನಂಬುವುದಿಲ್ಲ. ಏಕೆಂದರೆ ನಾನು ನೋಡಿಲ್ಲ. ನನಗೆ ಯಾವುದು ಗೊತ್ತಿಲ್ಲವೋ ಅದನ್ನು ನಂಬುವುದಿಲ್ಲ ಎಂದವರು. ಇವರು ರಾಮಕೃಷ್ಣ ಪರಮಹಂಸರು ನಂಬಿದ್ದರು. ಜೊತೆಗೆ ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ನಂಬಿದವರು ಇವರು. ಹೀಗೆ ಅನೇಕ ಕೊಡುಗೆಗಳನ್ನು ನೀಡಿದ್ದ ಇವರು ಡಿಸೆಂಬರ್ 9, 1997 ರಲ್ಲಿ ಮಣಿಪಾಲದಲ್ಲಿ ವಿಧಿವಶರಾದರು.