
ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡುಗಳನ್ನು ಪಡೆಯಿತು. 2004 ರ ಜನವರಿ 6 ರಂದು ರಾಜ್ಯ ಸರ್ಕಾರ ಅದನ್ನು ‘ನಾಡಗೀತೆ’ಯಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.
ನಾಡಗೀತೆಗೆ ಮೊಟ್ಟ ಮೊದಲ ಬಾರಿಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದರು. ನಂತರದ ದಿನಗಳಲ್ಲಿ ಸಿ. ಅಶ್ವತ್ಥ್ ಅವರ ರಾಗ ಸಂಯೋಜನೆ ಜನಪ್ರಿಯತೆ ಗಳಿಸಿತು.
ನಾಡಗೀತೆಯ ಅಧಿಕೃತ ಸಾಲುಗಳು
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಭೂದೇವಿಯ ಮಕುಟದ ನವಮಣಿಯೆ,
ಗಂಧದ ಚಂದದ ಹೊನ್ನಿನ ಗಣಿಯೆ;
ರಾಘವ ಮಧುಸೂದನರವತರಿಸಿದ
ಭಾರತ ಜನನಿಯ ತನುಜಾತೆ !
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಜನನಿಯ ಜೋಗುಳ ವೇದದ ಘೋಷ,
ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶ್ವರ ಮಧ್ವರ ದಿವ್ಯಾರಣ್ಯ,
ರನ್ನ ಷಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸರ ಮಂಗಳಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ
ನಾನಕ ರಾಮಾ ನಂದ ಕಬೀರರ
ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೇ,
ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗಾ,
ಕಾವೇರಿಯ ವರ ರಂಗಾ
ಚೈತನ್ಯ ಪರಮಹಂಸ ವಿವೇಕರ,
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!
ಸರ್ವ ಜನಾಂಗದ ಶಾಂತಿಯ ತೋಟ,
ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ,
ಪಾರಸಿಕ ಜೈನರುದ್ಯಾನ,
ಜನಕನ ಹೋಲುವ ದೊರೆಗಳ ಧಾಮ,
ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ,
ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿ ವನಗಳ ನಾಡೇ,
ಜಯ ಹೇ ರಸಋಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ,
ಜಯ ಹೇ ಕರ್ನಾಟಕ ಮಾತೆ!