ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಗರಿಷ್ಠ 30 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈಗ 42 ದಿನಗಳಿಗೆ ಏರಿಕೆ ಮಾಡಲಾಗಿದೆ. ಅಂಗಾಂಗ ದಾನಿಗಳು ಮಾಡುತ್ತಿರುವ ಉದಾತ್ತ ಕಾರ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅಂಗಾಂಗ ದಾನಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಂಗಾಂಗ ದಾನದ ಸಂದರ್ಭದಲ್ಲಿ ಆಗುವ ಶಸ್ತ್ರ ಚಿಕಿತ್ಸೆಯಿಂದ ಚೇತರಿಕೆ ಸಮಯವನ್ನು ಪರಿಗಣಿಸಿ ಸರ್ಕಾರಿ ನೋಂದಾಯಿತ ವೈದ್ಯರ ಶಿಫಾರಸ್ಸಿನ ಮೇರೆಗೆ ಗರಿಷ್ಠ 42 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ನೀಡುವ ಕುರಿತು ಸಿಬ್ಬಂದಿ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿದ ಬಳಿಕ ನಿರ್ಧಾರ ಕೈಗೊಂಡಿದೆ.
ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ 30 ದಿನದ ರಜೆ ಅವಧಿಯನ್ನು ವಿಸ್ತರಿಸಬೇಕು ಎಂಬ ಮನವಿ ಕೇಳಿ ಬಂದಿದ್ದರ ಹಿನ್ನೆಲೆಯಲ್ಲಿ ಅಂತಿಮವಾಗಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.