ಅದಾನಿ ಗ್ರೂಪ್ ಕುರಿತಂತೆ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಳಿಕ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಇದರ ಪರಿಣಾಮ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 7ನೇ ಸ್ಥಾನಕ್ಕೆ ಬಂದಿದ್ದಾರೆ.
ಅದಾನಿ ಗ್ರೂಪ್ ಮಾಲಿಕತ್ವದ ಕಂಪನಿಗಳ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿರುವುದರ ಪರಿಣಾಮ ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದ ಭಾರತೀಯ ಜೀವ ವಿಮಾ ನಿಗಮಕ್ಕೂ ತಟ್ಟಿದ್ದು, ಅದಾನಿ ಸಮೂಹದ ಕಂಪನಿಗಳಲ್ಲಿ ಎಲ್ಐಸಿ ಹೂಡಿಕೆ ಮೌಲ್ಯ ಜನವರಿ 24ರ ವೇಳೆಗೆ 81,268 ಕೋಟಿ ರೂಪಾಯಿಗಳಿದ್ದಿದ್ದು, ಜನವರಿ 27ರ ವೇಳೆಗೆ 62,621 ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ.
ಮುಂದಿನ ದಿನಗಳಲ್ಲಿ ಅದಾನಿ ಗ್ರೂಪ್ ಮಾಲಿಕತ್ವದ ಕಂಪನಿಗಳ ಷೇರುಗಳ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಬಹುದು ಎಂದು ಹೇಳಲಾಗುತ್ತಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಇದರ ಜೊತೆಗೆ ದೇಶದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡ ಅದಾನಿ ಗ್ರೂಪ್ ಗೆ ಭಾರಿ ಸಾಲ ನೀಡಿದ್ದು, ಈಗ ನಡೆಯುತ್ತಿರುವ ಬೆಳವಣಿಗೆಯಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡಿದೆ. ಇದು ಹೂಡಿಕೆದಾರರ ಮೇಲೂ ಪರಿಣಾಮ ಬೀರಿದೆ.