ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಬಹುದೆಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಗರಿಗೆದರಿದೆ. ಆಂತರಿಕ ಸಮೀಕ್ಷೆಯಲ್ಲೂ ತಮಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂಬ ನಿರೀಕ್ಷೆ ಹೊಂದಿರುವ ಕಾಂಗ್ರೆಸ್ ನಾಯಕರು ಸರ್ಕಾರ ರಚನೆಗೆ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೆ ಮುಖ್ಯಮಂತ್ರಿ ರೇಸ್ ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂಚೂಣಿಯಲ್ಲಿದ್ದು, ಜಿ. ಪರಮೇಶ್ವರ್ ಕೂಡಾ ಆಕಾಂಕ್ಷಿಯಾಗಿದ್ದಾರೆ. ಕೆಲವೊಂದು ಮಾಹಿತಿಗಳ ಪ್ರಕಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯಕ್ಕೆ ಮರಳಿ ಮುಖ್ಯಮಂತ್ರಿಯಾಗಬಹುದು ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ.
ಒಂದೊಮ್ಮೆ ಅತಂತ್ರ ಪರಿಸ್ಥಿತಿ ನಿರ್ಮಾಣವಾದಲ್ಲಿ ಜೆಡಿಎಸ್ ಜೊತೆ ಕೈಜೋಡಿಸಿದರೆ ಅಂತಹ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಅದೃಷ್ಟ ಒಲಿಯಬಹುದು ಎಂದು ಹೇಳಲಾಗುತ್ತಿದೆ. ಇನ್ನು ಬಿಜೆಪಿ ಕೂಡ ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದ್ದು ಒಂದೊಮ್ಮೆ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ ಸಿಗದಿದ್ದರೆ ಜೆಡಿಎಸ್ ಜೊತೆ ಕೈಜೋಡಿಸುವ ಅಥವಾ ಆಪರೇಷನ್ ಕಮಲ ಮಾಡುವ ಲೆಕ್ಕಾಚಾರದಲ್ಲಿದೆ ಎಂದು ಹೇಳಲಾಗುತ್ತಿದೆ.