ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಮೂಲಕ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲೂ ನೆಲೆಯೂರಲು ಬಿಜೆಪಿ ಪ್ರಯತ್ನ ನಡೆಸಿದ್ದು, ಹೀಗಾಗಿಯೇ ಕೇಂದ್ರ ನಾಯಕರು ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲೂ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಅಮಿತ್ ಷಾ ಇಲ್ಲಿ ನಡೆಯುತ್ತಿರುವ ಬೆಳವಣಿಗೆಯ ಪ್ರತಿಯೊಂದು ವಿವರಗಳನ್ನು ಗಮನಿಸುತ್ತಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮತ್ತಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಸಲುವಾಗಿ ಗೃಹ ಸಚಿವ ಅಮಿತ್ ಷಾ ಹಾಗೂ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದ್ದು, ಈ ಇಬ್ಬರು ನಾಯಕರಿಗಾಗಿ ಮನೆ ಹುಡುಕುವ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಂದಾಯ ಸಚಿವ ಆರ್. ಅಶೋಕ್ ಅವರೇ ಈ ವಿಷಯವನ್ನು ತಿಳಿಸಿದ್ದು, ವಿಧಾನಸಭಾ ಚುನಾವಣೆ ಮುಗಿಯುವವರೆಗೂ ಉಭಯ ನಾಯಕರುಗಳು ಇಲ್ಲಿಯೇ ಇರಲಿದ್ದಾರೆ ಎಂದು ಹೇಳಿದ್ದಾರೆ.