
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿದ್ದರು. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಪಕ್ಷದ ಹಲವು ಸಭೆಗಳಲ್ಲಿ ಭಾಗಿಯಾಗುವುದರ ಜೊತೆಗೆ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಶಿರಾದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುರುವಾರ ಬೆಳಿಗ್ಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸಲಿದ್ದು, ಶಕ್ತಿಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಅಲ್ಲಿಂದ ಚಿತ್ರದುರ್ಗಕ್ಕೆ ತೆರಳಿ ಅನುಭವ ಮಂಟಪದಲ್ಲಿ ನಡೆಯುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಸಂಜೆ ಮಾದಾರ ಚೆನ್ನಯ್ಯ ಮಠ, ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಬಳಿಕ ದಾವಣಗೆರೆಗೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಶುಕ್ರವಾರ ಬೆಳಗ್ಗೆ ಹರಿಹರದ ಪಂಚಮಸಾಲಿ ಮಠ, ಬೆಳ್ಳೋಡಿಯ ಕನಕ ಗುರು ಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಧ್ಯಾಹ್ನ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.