ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಆರೋಗ್ಯ ವಿಚಾರಿಸುವ ನೆಪದಲ್ಲಿ ಹಾಲಪ್ಪ ನನ್ನ ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ. ಆದರೆ ಈಗ ಕಾಗೋಡು ತಿಮ್ಮಪ್ಪ ನನ್ನನ್ನು ಬೆಂಬಲಿಸುತ್ತಿದ್ದಾರೆ ಎಂದು ಹಾಲಪ್ಪ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದು, ಆತ ನನ್ನ ಎದುರಿಗೆ ಬಂದರೆ ನಾಲಿಗೆಯನ್ನು ಕಿತ್ತು ಹಾಕಿ ಬಿಡುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಾಗರ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ರೈತರ ಬಗರ್ ಹುಕುಂ ಸಮಸ್ಯೆ ಬಗೆಹರಿದಿಲ್ಲ. ಬಡವರಿಗೆ ಮನೆಯನ್ನೂ ನೀಡಿಲ್ಲ ಎಂದು ಹೇಳಿದ ಕಾಗೋಡು ತಿಮ್ಮಪ್ಪ, ಅಯೋಗ್ಯ ಹಾಲಪ್ಪನನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೊಗೆಯಬೇಕು ಎಂದು ಗುಡುಗಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ಕಣಕ್ಕಿಳಿದಿದ್ದು, ಕಾಂಗ್ರೆಸ್ ನಿಂದ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಸೈಯದ್ ಜಾಕೀರ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸಿದ್ದಾರೆ.