ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. ಅರ್ಜಿ ಸಲ್ಲಿಸುವವರು 2 ಲಕ್ಷ ರೂಪಾಯಿ ಡಿಡಿ ಹಾಗೂ ಅರ್ಜಿ ಶುಲ್ಕ 5000ರೂ. ಗಳನ್ನು ನೀಡಬೇಕಾಗಿತ್ತು.
ಹೀಗಾಗಿ ರಾಜ್ಯದ 220 ಕ್ಷೇತ್ರಗಳಿಂದ 1,200ಕ್ಕೂ ಅಧಿಕ ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಸಿದವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಎಲ್ಲರನ್ನೂ ಅಚ್ಚರಿಗೊಳಿಸಿದೆ.
ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಮಾತನಾಡುವ ವೇಳೆ ಅವರು, ಅರ್ಜಿ ಸಲ್ಲಿಸದವರಿಗೂ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದು, ಈ ಮೂಲಕ ಜೆಡಿಎಸ್, ಬಿಜೆಪಿಯ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುವ ಸುಳಿವನ್ನು ಪರೋಕ್ಷವಾಗಿ ನೀಡಿದ್ದಾರೆ.