ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗದಿದ್ದರೂ ಸಹ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರುಗಳು ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜೆಡಿಎಸ್ ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೊತೆಗೆ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿದ್ದಾರೆ.
ಇದರ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೊಂದಲ ಆರಂಭವಾಗಿದೆ. ಈ ಮೊದಲು ಹೆಚ್.ಎಸ್. ಪ್ರಕಾಶ್ ಅವರ ಪುತ್ರ ಸ್ವರೂಪ್ ಅವರಿಗೆ ಟಿಕೆಟ್ ನೀಡಲು ಕುಮಾರಸ್ವಾಮಿ ನಿರ್ಧರಿಸಿದ್ದರಾದರೂ ಬಳಿಕ ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಹಾಸನದಿಂದ ತಾವು ಕಣಕ್ಕಿಳಿಯುವುದಾಗಿ ಘೋಷಿಸಿದ್ದರು. ಇದೀಗ ಈ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಭವಾನಿ ರೇವಣ್ಣನವರ ಹೇಳಿಕೆ ನಂತರ ಮಾತನಾಡಿದ್ದ ಕುಮಾರಸ್ವಾಮಿಯವರು, ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತರೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳುವ ಮೂಲಕ ಸ್ವರೂಪ್ ಅವರಿಗೆ ಟಿಕೆಟ್ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆ ಇದೀಗ ಭವಾನಿ ರೇವಣ್ಣನವರ ಇಬ್ಬರು ಪುತ್ರರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹಾಸನ ಜಿಲ್ಲೆಯ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ. ರೇವಣ್ಣನವರದೇ ಅಂತಿಮ ತೀರ್ಮಾನ ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರಿಗೆ ಸಂದೇಶ ರವಾನಿಸಿದ್ದಾರೆ.
ಅದರಲ್ಲೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಹಾಸನ ಜಿಲ್ಲೆಯ ರಾಜಕೀಯಕ್ಕೆ ಸಂಬಂಧಿಸಿದಂತೆ ರೇವಣ್ಣನವರು ತಿಳಿದಷ್ಟು ಇನ್ಯಾರೂ ತಿಳಿದಿಲ್ಲ. ಭವಾನಿ ರೇವಣ್ಣನವರಿಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದರೆ ಗೆಲುವು ಖಚಿತ. ಈ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.