ಇಂದಿನಿಂದ ರಾಜ್ಯದಾದ್ಯಂತ ಪಿಯು ಪರೀಕ್ಷೆ ಆರಂಭವಾಗಲಿದ್ದು, ಮೇ 18 ರ ವರೆಗೆ ನಡೆಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.
ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬಳಿಯ ಜೆರಾಕ್ಸ್ ಅಂಗಡಿ ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ವಿದ್ಯಾರ್ಥಿಗಳು ತೆರಳಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ ಏಪ್ರಿಲ್ 22 ರಿಂದ ಮೇ 18 ರ ವರೆಗೆ ರಾಜ್ಯದ 1,076 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಹೈಕೋರ್ಟ್ ಆದೇಶದನ್ವಯ ಹಿಜಾಬ್ ಸೇರಿದಂತೆ ಇತರೆ ಧಾರ್ಮಿಕ ಸಂಕೇತಗಳನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ತಿಳಿಸಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಸಿಬ್ಬಂದಿಗೂ ಕೂಡ ಇದೇ ನಿಯಮ ಅನ್ವಯವಾಗಲಿದೆ ಎಂದು ತಿಳಿದುಬಂದಿದೆ.