ಸೇವಾ ಭದ್ರತೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಸುಮಾರು 30 ಸಾವಿರಕ್ಕೂ ಅಧಿಕ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೇಡಿಕೆ ಈಡೇರಿಕೆ ಕುರಿತಂತೆ ಸರ್ಕಾರದ ಆದೇಶ ಪ್ರತಿ ಕೈ ಸೇರಿದರೆ ಮಾತ್ರ ಮುಷ್ಕರ ವಾಪಸ್ ಪಡೆಯುವುದಾಗಿ ಸಿಬ್ಬಂದಿ ಹೇಳಿದ್ದಾರೆ.
ಈ ಹಿಂದೆ ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಅದನ್ನು ಹಿಂಪಡೆಯಲಾಗಿತ್ತು. ಸೇವಾ ಭದ್ರತೆ ಕುರಿತಂತೆ ಸರ್ಕಾರವೇ ನೇಮಿಸಿದ್ದ ತಜ್ಞರ ಸಮಿತಿ ವರದಿ ಸಲ್ಲಿಸಿ ಒಂದೂವರೆ ವರ್ಷ ಕಳೆದರೂ ನಿರ್ಲಕ್ಷ ವಹಿಸಿರುವುದು ಸಿಬ್ಬಂದಿಯನ್ನು ಕೆರಳಿಸಿದೆ.