alex Certify ಇಲ್ಲಿದೆ ಆರೋಗ್ಯ ಇಲಾಖೆ ಹೊರಡಿಸಿರುವ ಕೊರೊನಾ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಆರೋಗ್ಯ ಇಲಾಖೆ ಹೊರಡಿಸಿರುವ ಕೊರೊನಾ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ

ಚೀನಾ, ಜಪಾನ್, ಅಮೆರಿಕಾ ಮೊದಲಾದ ರಾಷ್ಟ್ರಗಳಲ್ಲಿ ಕಂಡು ಬಂದಿರುವ ಕೊರೊನಾದ ರೂಪಾಂತರಿ ಒಮಿಕ್ರಾನ್ ಉಪತಳಿ BF.7 ಭಾರತದಲ್ಲೂ ಕಂಡು ಬಂದಿರುವ ಕಾರಣ ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವತಿಯಿಂದ ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್ ರಾಜ್ಯದ ಕೋವಿಡ್ – 19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಕೆಲವೊಂದು ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ ಎಂದು ತಿಳಿಸಲಾಗಿದೆ.

ಮುಚ್ಚಿದ ಸ್ಥಳಗಳಾದ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿ ಸೇರಿದಂತೆ ಬಸ್, ರೈಲು, ಮೆಟ್ರೋ ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧಾರಣೆ ಮಾಡುವುದು ಅಗತ್ಯವಾಗಿರುತ್ತದೆ ಎಂದು ತಿಳಿಸಲಾಗಿದೆ. ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಒಳಾಂಗಣದಲ್ಲಿದ್ದ ಸಂದರ್ಭದಲ್ಲೂ ಮಾಸ್ಕ್ ಧರಿಸುವುದು ಉತ್ತಮ.

ಅರ್ಹರೆಲ್ಲರೂ ಕೋವಿಡ್ 19 ಲಸಿಕೆಯ ಪ್ರಿಕಾಶನರಿ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ 19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳಬೇಕು. ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು ಅಗತ್ಯ.

ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ.

ಸಭೆ ಹಾಗೂ ಸಮಾರಂಭಗಳನ್ನ ಆಯೋಜಿಸುವವರಿಗೂ ಕೆಲವೊಂದು ಮಾರ್ಗಸೂಚಿಗಳನ್ನು ನೀಡಲಾಗಿದೆ.

ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ, ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು ಎಂದು ತಿಳಿಸಲಾಗಿದೆ.

ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ.

ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...