ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಸ್ವಯಂ ಪ್ರೇರಿತರಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ತನಿಖೆ ಬಳಿಕ ಅವರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನು ಈಶ್ವರಪ್ಪನವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆಹೋರಾತ್ರಿ ಹೋರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಇವರೇ ಜಡ್ಜ್, ಪೊಲೀಸರಂತೆ ಮಾತನಾಡಿದರೆ ಹೇಗೆ. ಪೊಲೀಸರು ಮೊದಲು ಅವರ ಕೆಲಸ ಮಾಡುವುದಕ್ಕೆ ಬಿಡಲಿ ಎಂದು ಹೇಳಿದ್ದಾರೆ.