ಲಕ್ನೋ : ದೇಶದಲ್ಲಿನ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲೆಡೆ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಅತೀ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಗರಿಗೆದರಿವೆ.
ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು ಈ ರಾಜ್ಯದ ಚುನಾವಣೆಯತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿವೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು 61 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಅಲ್ಲದೇ, ಈ ಪಟ್ಟಿಯಲ್ಲಿ ಬರೋಬ್ಬರಿ 24 ಮಹಿಳಾ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಈ ಹಿಂದೆಯೇ ಚುನಾವಣೆಗೂ ಮುನ್ನ ಕಾಂಗ್ರೆಸ್ ನ ನಾಯಕಿ ಪ್ರಿಯಾಂಕಾ ವಾದ್ರಾ ಶೇ.40ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಕಾಂಗ್ರೆಸ್ ಪಟ್ಟಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ.
ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ 125 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದ್ದು, 50 ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 41 ಅಭ್ಯರ್ಥಿಗಳಲ್ಲಿ 16 ಜನ ಮಹಿಳೆಯರ ಹೆಸರುಗಳಿದ್ದವು. ಮೂರನೇ ಪಟ್ಟಿಯಲ್ಲಿ 89 ಜನರ ಪೈಕಿ 37 ಜನ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಸದ್ಯ ನಾಲ್ಕನೇ ಪಟ್ಟಿಯಲ್ಲಿ 61 ಅಭ್ಯರ್ಥಿಗಳ ಪೈಕಿ 24 ಜನ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.