ಬೆಂಗಳೂರು: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದ ಉದಯಪುರ ಟೈಲರ್ ಬರ್ಬರ ಹತ್ಯೆ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೇಳುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ದಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಬೀಟ್ ಪೊಲೀಸರು ಅಲರ್ಟ್ ಆಗಿರಬೇಕು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.
ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದ್ದ ಮುಸ್ಲಿಂ ಮೂಲಭೂತವಾದಿ ಇಬ್ಬರು ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಪ್ರಕರಣ ಖಂಡಿಸಿ ಹಲವೆಡೆ ಪ್ರತಿಭಟನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.