ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳ ನಾಯಕರು ಈಗಿನಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಮುಂಚೂಣಿಯಲ್ಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ.
ಇದರ ಮಧ್ಯೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ಭವಾನಿ ರೇವಣ್ಣ ಆಕಾಂಕ್ಷಿಯಾಗಿದ್ದ ಕಾರಣ ಯಾರಿಗೆ ಟಿಕೆಟ್ ಸಿಗಲಿದೆ ಎಂಬ ಕುತೂಹಲ ಮೂಡಿತ್ತು. ಇದೀಗ ಈ ವಿಚಾರಕ್ಕೆ ತೆರೆ ಎಳೆಯಲಾಗಿದೆ ಎನ್ನಲಾಗಿದ್ದು, ಎಚ್ ಡಿ ರೇವಣ್ಣ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿದೆ.
ಹೊಳೆನರಸೀಪುರ ಕ್ಷೇತ್ರದ ಜೊತೆಗೆ ಹಾಸನ ವಿಧಾನಸಭಾ ಕ್ಷೇತ್ರದಿಂದಲೂ ಎಚ್ ಡಿ ರೇವಣ್ಣ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಹಾಸನ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಬಳಿಕ ನಡೆಯುವ ಉಪ ಚುನಾವಣೆಯಲ್ಲಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಿ ಗೆಲ್ಲಿಸುವ ಲೆಕ್ಕಾಚಾರ ಇದರ ಹಿಂದಿದೆ ಎಂದು ಅಭಿಪ್ರಾಯಪಡಲಾಗಿದೆ.
ಈ ಹಿಂದೆ ಕುಮಾರಸ್ವಾಮಿ, ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಿಂದ ಕಣಕ್ಕಿಳಿದು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಳಿಕ ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಇದೇ ತಂತ್ರಗಾರಿಕೆಯನ್ನು ರೇವಣ್ಣ ಮತ್ತವರ ಪತ್ನಿ ಭವಾನಿ ರೇವಣ್ಣ ಅವರ ವಿಚಾರದಲ್ಲೂ ಅನುಸರಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.